ಬೆಂಗಳೂರು: ಕಳೆದ ಮೂರು ವರ್ಷದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು 7,300 ಕೋಟಿ ರೂ. ಖರ್ಚು ಮಾಡಲಾಗಿದೆ, ರಸ್ತೆ ಗುಂಡಿ ಮುಚ್ಚುವ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ಅಥವಾ ಕಾಂಗ್ರೆಸ್ ಸರ್ಕಾರಗಳು ಅಧಿಕಾರಕ್ಕೆ ಬಂದರೂ ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗಿಲ್ಲ. ರಸ್ತೆ ಗುಂಡಿ ಮುಚ್ಚುವ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡಲಾಗುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಬಿಎಂಪಿ ಕಮಿಷನರ್ ಅವರು ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಿದ್ದೇವೆ ಎಂದು ಹೇಳಿದ್ದರು. ಆದರೆ ಈವರೆಗೂ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸವೇ ಆಗಿಲ್ಲ ಎಂದರು.
ಬ್ರಾಂಡ್ ಬೆಂಗಳೂರು ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡುತ್ತಿರುವುದು ಕಮಿಷನ್ ದಂಧೆಯಾಗಿದೆ. ಬೆಂಗಳೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ರಸ್ತೆ ಗುಂಡಿಗಳು ಇರುವ ಕಡೆ ಆಮ್ ಆದ್ಮಿ ಪಕ್ಷದ ವತಿಯಿಂದ ಜನಾಂದೋಲನ ಮಾಡಲು ನಿರ್ಧರಿಸಲಾಗಿದೆ ಎಂದು ಮೋಹನ್ ದಾಸರಿ ತಿಳಿಸಿದರು.
ಬಿಬಿಎಂಪಿ ಚುನಾವಣೆ ನಡೆಸುವಂತೆ ನ್ಯಾಯಾಲಯ ಸರ್ಕಾರಕ್ಕೆ ಛೀಮಾರಿ ಹಾಕಿದ್ದರೂ ಭಂಡ ಸರ್ಕಾರ, ಚುನಾವಣೆ ನಡೆಸಲು ಮುಂದಾಗಿಲ್ಲ. ಕಾರ್ಪೊರೇಟರ್ಗಳು ಇಲ್ಲದೆ ಜನರ ಸಮಸ್ಯೆ ಕೇಳುವವರೇ ಇಲ್ಲದಂತಾಗಿದೆ. ಶಾಸಕರೇ ಬಿಬಿಎಂಪಿ ಚುನಾವಣೆ ನಡೆಸಲು ಅಡ್ಡಿಯಾಗಿದ್ದಾರೆ, ಬಿಜೆಪಿ ಬೇಕೆಂದೆ ಬಿಬಿಎಂಪಿ ಚುನಾವಣೆ ಮುಂದೂಡಿತ್ತು, ಇದೀಗ ಕಾಂಗ್ರೆಸ್ ಕೂಡ ಅದನ್ನೇ ಮಾಡುತ್ತಿದೆ. ಕೂಡಲೇ ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಒತ್ತಾಯಿಸಿದರು.
ಮಳೆ ಬಂದರೆ ಬಿಬಿಎಂಪಿ ಅಧಿಕಾರಿಗಳು, ಸರ್ಕಾರದ ಬಣ್ಣ ಬಯಲಾಗುತ್ತದೆ. ಬೆಳ್ಳಂದೂರು ಔಟರ್ ರಿಂಗ್ ರೋಡ್ ನೋಡಿದರೆ ರಸ್ತೆಗಳ ಗುಣಮಟ್ಟ ಯಾವ ಮಟ್ಟದಲ್ಲಿದೆ ಎನ್ನುವುದು ಗೊತ್ತಾಗುತ್ತದೆ. ರಸ್ತೆ ಗುಂಡಿಗಳಿಂದ ಕೂಡ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಮಹದೇವಪುರ ವ್ಯಾಪ್ತಿಯಲ್ಲಿ ಅತಿ ಹೆಚ್ಚು ತೆರಿಗೆ ಸಂಗ್ರಹವಾದರೂ, ಕಾಟಾಚಾರಕ್ಕೆ ರಸ್ತೆ ನಿರ್ಮಾಣ ಮಾಡಿ, ಜನರ ಜೀವದ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಪಕ್ಷದ ಬೆಂಗಳೂರು ಉಪಾಧ್ಯಕ್ಷ ಅಶೋಕ್ ಮೃತ್ಯುಂಜಯ ಆಕ್ರೋಶ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಯುವ ಘಟಕದ ಅಧ್ಯಕ್ಷ ಉಮೇಶ್ ಪಿಳ್ಳೆ ಗೌಡ ಹಾಗೂ ಆಟೋ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಸೇರಿದಂತೆ ಹಲವು ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.