ಬೆಂಗಳೂರು: ನಗರದ ಹೆಬ್ಬಾಳ ಜಂಕ್ಷನ್ ನಲ್ಲಿ ಸಮಗ್ರ ಅಭಿವೃದ್ಧಿಗಾಗಿ ವಿನ್ಯಾಸ ರೂಪಿಸಿ ನಿಗದಿತ ಅವಧಿಯಲ್ಲಿ ಅಭಿವೃದ್ಧಿ ಕಾರ್ಯ ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ರ ವರು ಅಧಿಕಾರಿಗಳಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಬ್ಬಾಳ ಜಂಕ್ಷನ್ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಜಂಟಿ ಪರಿಶೀಲನೆಯನ್ನು ನಡೆಸಿದ್ದು, ಈ ವೇಳೆ ಅವರು ಮಾತನಾಡಿದರು.
ಹೆಬ್ಬಾಳ ಜಂಕ್ಷನ್ ನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮೊದಲನೇ ಹಂತದ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು, ಕೆ.ಆರ್ ಪುರಂ ಕಡೆಯಿಂದ ನಗರದೊಳಗೆ ಬರುವ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ದವಿದೆ. ಅದರ ಜೊತೆಗೆ ಮೆಟ್ರೋ ಕಾಮಗಾರಿ, ಕೆ-ರೈಡ್ ನಿಂದ ಸಬ್ ಅರ್ಬನ್ ರೈಲ್ವೇ ಕಾಮಗಾರಿ, ಪಾಲಿಕೆಯಿಂದ ಟನಲ್ ರಸ್ತೆ ಸೇರಿದಂತೆ ಇನ್ನಿತರೆ ಕಾಮಗಾರಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಜಂಕ್ಷನ್ ಅಭಿವೃದ್ಧಿಗೆ ವಿನ್ಯಾಸ ರೂಪಿಸಲು ಸೂಚಿಸಿದರು.
ಹೆಬ್ಬಾಳ ಜಂಕ್ಷನ್ ಭಾಗದಲ್ಲಿ ಹಲವು ಕಾಮಗಾರಿಗಳು ನಡೆಯುತ್ತಿರುವ ಕಾರಣ ಪಾದಚಾರಿಗಳಿಗೆ ಸುರಕ್ಷಿತ ಓಡಾಟಕ್ಕೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಈ ನಿಟ್ಟಿನಲ್ಲಿ ಸರಿಯಾದ ಪಾದಚಾರಿ ಮಾರ್ಗಗಳನ್ನು ನಿರ್ಮಿಸಿ, ಪಾದಚಾರಿಗಳು ಒಂದೆಡೆಯಿಂದ ಮತ್ತೊಂದೆಡೆಗೆ ಸುಗಮವಾಗಿ ನಡೆದಾಡಲು ಸರಿಯಾದ ವ್ಯವಸ್ಥೆ ಕಲ್ಪಿಸಬೇಕು. ಪಾದಚಾರಿಗಳು ಓಡಾಡುವ ಸ್ಥಳದಲ್ಲಿ ಕ್ರಾಸಿಂಗ್, ಮಾರ್ಕಿಂಗ್ ಗಳನ್ನು ಸರಿಯಾಗಿ ಹಾಕಲು ಸೂಚನೆ ನೀಡಿದರು.
*ನಾಗವಾರ ಜಂಕ್ಷನ್ ನಲ್ಲಿ ಮೆಟ್ರೋ ಕಾಮಗಾರಿ ಪರಿಶೀಲನೆ:*
ನಾಗವಾರ ಜಂಕ್ಷನ್ ನಲ್ಲಿ ಮೆಟ್ರೋ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಜಂಕ್ಷನ್ ನಲ್ಲಿ ಮಳೆಗಾಲದ ವೇಳೆ ಜಲಾವೃತವಾಗುತ್ತದೆ. ಈ ನಿಟ್ಟಿನಲ್ಲಿ ಜಲಾವೃತವಾಗದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಹೊಸದಾಗಿ ಪೈಪ್ ಲೈನ್ ಕಾಮಗಾರಿ ನಡೆಸಿ ನೀರು ನಿಲ್ಲದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ಸೈಡ್ ಡ್ರೈನ್ ಗಳಲ್ಲಿ ಸ್ವಚ್ಛತೆ ಕಾಪಾಡಿ ಸರಾಗವಾಗಿ ನೀರು ಹರಿದುಹೋಗುವಂತೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.
ಇನ್ನು ಪಾದಚಾರಿ ಮಾರ್ಗಗಳನ್ನು ಅನಧಿಕೃತವಾಗಿ ಒತ್ತುವರಿ ಮಾಡಿರುವ ಕಡೆ ತೆರವುಗೊಳಿಸಿ, ಪಾದಚಾರಿಗಳ ಓಡಾಟಕ್ಕೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಜಂಕ್ಷನ್ಗೆ ಕಾಬುಲ್ ಸ್ಟೋನ್ ಅಳವಡಿಸಿ ಅಭಿವೃದ್ಧಿಪಡಿಸಲು ಸೂಚನೆ ನೀಡಿದರು.
*ಕೆ.ಆರ್ ಪುರಂ ಮೆಟ್ರೋ ನಿಲ್ದಾಣ:*
ಕೆ.ಆರ್ ಪುರಂ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿಗಳ ಓಡಾಟಕ್ಕೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಸುಗಮ ಪಾದಚಾರಿ ಮಾರ್ಗಗಳನ್ನು ನಿರ್ಮಾಣ ಮಾಡಬೇಕು. ಜೊತೆಗೆ ಮೇಲ್ಸೇತುವೆ ಕೆಳಭಾಗದಲ್ಲಿ ಸ್ವಚ್ಛತೆ ಕಾಪಾಡಿ ಸುಂದರೀಕರಣವಾಗಿರುವಂತೆ ನೋಡಿಕೊಳ್ಳಲು ಸೂಚಿಸಿದರು.
*ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್* ರವರು ಮಾತನಾಡಿ, ಹೆಬ್ಬಾಳ ಜಂಕ್ಷನ್ ನಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ವೇಳೆ ಸಂಚಾರಿ ಪೊಲೀಸ್ ವಿಭಾಗದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದೆಂದು ತಿಳಿಸಿದರರು.
ಈ ವೇಳೆ ಮುಖ್ಯ ಅಭಿಯಂತರರಾದ ಲೋಕೇಶ್, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.