ಬೆಂಗಳೂರು:ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹದೇವಪುರ ವಲಯ ವ್ಯಾಪ್ತಿಗೆ ಸಂಬಂಧಿಸಿದಂತೆ ನಡೆದ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಆದ್ಯತೆ ಮೇರೆಗೆ ರಸ್ತೆಗುಂಡಿಗಳನ್ನು ಮುಚ್ಚಬೇಕು. ಅದರಂತೆ ಮೊದಲಿಗೆ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಿ ನಂತರ ವಾರ್ಡ್ ರಸ್ತೆಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚಿಸಲಾಯಿತು.
ಬೆಸ್ಕಾಂ ಹಾಗೂ ಜಲಮಂಡಳಿ ಸೇರಿದಂತೆ ಇನ್ನಿತರೆ ಇಲಾಖೆಗಳು ಪಾಲಿಕೆಯ ಅನುಮತಿಯಿಲ್ಲದೆ ರಸ್ತೆ ಕತ್ತರಿಸುವಂತಿಲ್ಲ. ಈ ಪೈಕಿ ಪಾಲಿಕೆಯ ಅನುಮತಿಯಿಲ್ಲದೆ ರಸ್ತೆ ಕತ್ತರಿಸಿದರೆ ಸಂಬಂಧಪಟ್ಟ ಇಲಾಖೆಗೆ ದಂಡ ವಿಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂಜಿನಿಯರಿಂಗ್ ವಿಭಾಗದಿಂದ ಟೆಂಡರ್ ಕರೆದಿರುವ ವಿವಿಧ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಬೇಕು. ಆಯಾ ವಾರ್ಡ್ಗಳಲ್ಲಿ ಅನಧಿಕೃತ ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿದ್ದಾರೆಯೇ ಎಂಬುದನ್ನು ವಾರ್ಡ್ ಇಂಜಿನಿಯರ್ ಗಳು ಹಾಗೂ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕರು ಜಂಟಿ ತಪಾಸಣೆ ನಡೆಸಿ ಅನಧಿಕೃತ ಕಟ್ಟಡ ನಿರ್ಮಾಣ ಮಾಡುವುದು ಕಂಡುಬಂದರೆ ಸಂಬಂಧಪಟ್ಟವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡಿರುವುದನ್ನು ವಲಯ ಜಂಟಿ ಆಯುಕ್ತರು ಹಾಗೂ ಘನತ್ಯಾಜ್ಯ ವಿಭಾಗದ ಅಧೀಕ್ಷಕ ಅಭಿಯಂತರರ ನೇತೃತ್ವದಲ್ಲಿ ಪಾದಚಾರಿ ಮಾರ್ಗ ಒತ್ತುವರಿಗಳ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜಕಾಲುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ:
ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿರುವ ಕಡೆ ಕೈಗೆತ್ತಿಕೊಳ್ಳಬೇಕಿರುವ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಇನ್ನು ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ತಹಶೀಲ್ದಾರರಿಂದ ಒತ್ತುವರಿ ತೆರವಿಗಾಗಿ ಆರ್ಡರ್ ನೀಡುವ ಕಡೆ ಕೂಡಲೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ರಾಜಕಾಲುವೆ ನೀರು ಸರಾಗವಾಗಿ ಹರಿದು ಹೋಗಲು ಸದಾ ಸ್ವಚ್ಛತೆ ಮಾಡುತ್ತಿರಬೇಕು. ಪಾಲಿಕೆ ವತಿಯಿಂದ ಕೆಸಲ ಮಾಡುತ್ತಿರುವ ಬಗ್ಗೆ ಸಾರ್ವಜನಿಕರ ಗಮನಕ್ಕೆ ಬರಬೇಕು. ಈ ಸಂಬಂಧ ರಾಜಕಾಲುವೆಗಳಲ್ಲಿ ಸ್ವಚ್ಛತೆ ಮಾಡಿರುವ ಬಗ್ಗೆ ವೆಬ್ಸೈಟ್ ನಲ್ಲಿ ಹಾಕಲು ಸೂಚಿಸಿದರು.
ಇನ್ನು ಬೆಳ್ಳಂದೂರು ಬಳಿ ಪ್ರಸ್ಟೀಜ್ ವತಿಯಿಂದ ರಾಜಕಾಲುವೆ ನಿರ್ಮಾಣ ಮಾಡಲಾಗುತ್ತಿದ್ದು, ಕಂದಾಯ ಇಲಾಖೆಯ ಸಮೀಕ್ಷೆಯನುಸಾರ ರಾಜಕಾಲುವೆಯನ್ನು ನಿರ್ಮಾಣ ಮಾಡುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು. ಕಂದಾಯ ಸರ್ವೇ ಪ್ರಕಾರ ರಾಜಕಾಲುವೆಯ ಅಗಲ ಕಡಿಮೆ ಮಾಡಿದ್ದಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಸ್ತಿ ತೆರಿಗೆ ಸಂಗ್ರಹಿಸಲು ಕ್ರಮವಹಿಸಿ:
ಪಾಲಿಕೆಗೆ ಹೆಚ್ಚು ಮೊತ್ತ ಬಾಕಿ ಉಳಿಸಿಕೊಂಡಿರುವ ಟಾಪ್ ಡಿಫಾಲ್ಟ್ ಗಳ ಪಟ್ಟಿಯನುಸಾರ ಕಾನೂನು ರೀತಿಯ ಕ್ರಮ ಕೈಗೊಂಡು ತೆರಿಗೆ ವಸೂಲಿ ಮಾಡಿ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ನೀಡಿ ಆಸ್ತಿ ತೆರಿಗೆ ಸಂಗ್ರಹಿಸಲು ಸೂಕ್ತ ಕ್ರಮ ವಹಿಸಬೇಕು. ಆಸ್ತಿ ತೆರಿಗೆ ವ್ಯಾಪ್ತಿಗೆ ಬಾರದ ಆಸ್ತಿಗಳನ್ನು ಪತ್ತೆ ಮಾಡಿ ತೆರಿಗೆ ವ್ಯಾಪ್ತಿಗೆ ತರಬೇಕು. ಆಸ್ತಿ ತೆರಿಗೆ ಸಂಗ್ರಹಿಸಲು ಎಲ್ಲಾ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಅವರು ಹೇಳಿದರು.
ORRCA ಪದಾಧಿಕಾರಿಗಳ ಜೊತೆ ಸಭೆ:
ಔಟರ್ ರಿಂಗ್ ರೋಡ್ ಕಂಪನಿಗಳ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸಿ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ORRCA ಅವರು ತಿಳಿಸುವ ಸಮಸ್ಯೆಗಳನ್ನು ಬಗೆಹರಿಸಿಕೊಡಬೇಕು. ಈ ಸಂಬಂಧ ಸರ್ವೀಸ್ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಬೇಕು. ರಸ್ತೆಯಲ್ಲಿ ನೀರು ನಿಲ್ಲುವುದಂತೆ ನೋಡಿಕೊಳ್ಳಬೇಕು. ಬೀದಿ ದೀಪಗಳು ಇಲ್ಲದ ಕಡೆ ಕೂಡಲೆ ಬೀದಿ ದೀಪಗಳನ್ನು ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ವಲಯ ಆಯುಕ್ತರಾದ ಇಬ್ರಾಹಿಂ ಮೊಮಿನ್, ವಲಯ ಜಂಟಿ ಆಯುಕ್ತರಾದ ಡಾ. ದಾಕ್ಷಾಯಿಣಿ, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರಹ್ಲಾದ್, ಮುಖ್ಯ ಅಭಿಯಂತರರಾದ ಲೋಕೇಶ್, ಮೆಟ್ರೋ, ಜಲಮಂಡಲಿ ಹಾಗೂ ಬೆಸ್ಕಾಂ ಸಿಬ್ಬಂದಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.