ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರ ಶಾಸಕ ರಾಜ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಕಂಬನಿ ಮಿಡಿದಿದ್ದಾರೆ.ನಾಲ್ಕು ಬಾರಿ ಶಾಸಕರಾಗಿದ್ದ ಅವರು ಇತ್ತೀಚೆಗಷ್ಟೇ ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.
ಉತ್ತರ ಕರ್ನಾಟಕ, ವಿಶೇಷವಾಗಿ ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಸಾಕಷ್ಟು ಕೆಲಸ ಮಾಡಿದ್ದರು. ಅವರ ನಿಧನದಿಂದ ಕಾಂಗ್ರೆಸ್ ಪಕ್ಷ ಒಬ್ಬ ಅಪರೂಪದ ಜನನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಲಭಿಸಲಿ. ಅವರ ಕುಟುಂಬ ಹಾಗೂ ಅಪಾರ ಅನುಯಾಯಿಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.