ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ ಭಾರತ ಚುನವಣಾ ಆಯೋಗದಿಂದ ನೇಮಿಸಲ್ಪಟ್ಟ ಸಾಮಾನ್ಯ ವೀಕ್ಷಕರೊಂದಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಸಂವಾದ ನಡೆಸಿದರು.
ಲೋಕಸಭಾ ಚುನಾವಣೆಯ ಸಂಬಂಧ ಎಲ್ಲಾ ರೀತಿಯ ಆಡಳಿತಾತ್ಮಕ ಪ್ರಕ್ರಿಯೆ ಕುರಿತು ನೇಮಿಸಲ್ಪಟ್ಟ ಸಾಮಾನ್ಯ ವೀಕ್ಷಕರು(General Observers), ಚುನಾವಣಾಧಿಕಾರಿಗಳು ಹಾಗೂ ಇತರೆ ನೋಡಲ್ ಅಧಿಕಾರಿಗಳ ಜೊತೆ ಕುಮಾರ ಕೃಪ ಸಭಾಂಗಣದಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಮಾನ್ಯ ವೀಕ್ಷಕರಿಗೆ ಲೋಕಸಭಾ ಚುನಾವಣಾ ನಿರ್ವಹಣಾ ಯೋಜನೆ(PEMP)ಯ ಸಂಪೂರ್ಣ ವರದಿಯ ಪುಸ್ತಕವನ್ನು ನೀಡಿ ಬೆಂಗಳೂರು ವ್ಯಾಪ್ತಿಯ ಸಂಪೂರ್ಣ ವಿವರ ವರದಿಯಲ್ಲಿ ಇರುವುದಾಗಿ ತಿಳಿಸಿದರು.
ಜಿಲ್ಲಾ ಚುನಾವನಾಧಿಕಾರಿ-ಬೆಂಗಳೂರು ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, 24 ವಿಧಾನಸಭಾ ಕ್ಷೇತ್ರಗಳು ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳಿಗೆ ಬರಲಿವೆ. ಉಳಿದ 4 ವಿಧಾನಸಭಾ ಕ್ಷೇತ್ರಗಳಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 1 ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ 3 ವಿಧಾನಸಭಾ ಕ್ಷೇತ್ರಗಳು ಬರಲಿವೆ ಎಂದು ಮಾಹಿತಿ ನೀಡಿದರು.
ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಮೇಲ್ವಿಚಾರಣೆ ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ರವರ ಹಂತದಲ್ಲಿ ಮಾದರಿ ನೀತಿ ಸಂಹಿತೆ ಸೆಲ್, ಚುನಾವಣಾ ವೆಚ್ಚಗಳ ನಿರ್ವಹಣಾ ಸೆಲ್, ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ, ನಿಯಂತ್ರಣ ಕೊಠಡಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಿಕೊಂಡು ಆ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ಚುನಾವಣೆ ಹಿನ್ನೆಲೆ ಜಿಲ್ಲಾ ಚುನಾವಣಾಧಿಕಾರಿ ರವರ ಕಛೇರಿಯಿಂದ ಸ್ವೀಪ್ ಚಟುವಟಿಕೆಗಳನ್ನು ನಡೆಸಿ ನಾಗರೀಕರಲ್ಲಿ ಮತದಾನ ಮಾಡುವ ಕುರಿತು ಹಾಗೂ ಮತದಾನದ ಪ್ರಮಾಣವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಅರಿವು ಮೂಡಿಸಲು ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಚುನಾವಣಾ ಕಾರ್ಯದ ಭಾಗವಾಗಿ ವಿವಿಧ ಇಲಾಖೆಗಳಿಂದ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜನೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಮೊದಲನೇ ಹಂತದ ಮತಗಟ್ಟೆ ಸಿಬ್ಬಂದಿಯ ರ್ಯಾಂಡಮೈಸೇಷನ್ ಅನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಎಂಸಿಎಂಸಿಯಿಂದ ಮೇಲ್ವಿಚಾರಣೆ:
ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲುಸ್ತುವಾರಿ ಸಮಿತಿಯಲ್ಲಿ ದೃಶ್ಯ ಮಾಧ್ಯಮ, ಸಾಮಾಜಿಕ ಜಾಲತಾಣ, ರೇಡಿಯೋ ಹಾಗೂ ಮುದ್ರಣ ಮಾಧ್ಯಮಗಳ ಮೇಲೆ ನಿಗಾ ಹಾಗೂ ಮೇಲ್ವಿಚಾರಣೆ ಮಾಡಲಾಗುತ್ತದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ನೀಡಿ ಕಾನೂನು ಕ್ರಮ ಕೈಗೊಳ್ಳಲಾಗುತಲತ್ತಿದೆ ಎಂದು ಹೇಳಿದರು.
ಈ ವೇಳೆ ಎಂಸಿಸಿ ನೋಡಲ್ ಅಧಿಕಾರಿಯಾದ ಮುನೀಶ್ ಮೌದ್ಗಿಲ್, ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ, ಚುನಾವಣಾಧಿಕಾರಿಗಳಾದ ಡಾ. ಕೆ. ಹರೀಶ್ ಕುಮಾರ್, ಕೆ. ಎ ದಯಾನಂದ, ವಿನೋತ್ ಪ್ರಿಯಾ, ಹಣ ಬಿಡುಗಡೆಗೊಳಿಸುವ ಸಮಿತಿಯ ಮುಖ್ಯಸ್ಥರು, ಎಂಸಿಎಂಸಿ ನೋಡಲ್ ಅಧಿಕಾರಿ, ಸಾಮಾನ್ಯ ವೀಕ್ಷಕರು, ಪೊಲೀಸ್ ನೋಡಲ್ ಅಧಿಕಾರಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.