ಬೆಂಗಳೂರು; ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಸೇರಿದಂತೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಶ್ರೀಗಳ ಆಶೀರ್ವಾದ ಪಡೆದರು.
ಮಹಾಲಕ್ಷ್ಮೀ ಲೇ ಔಟ್ ನ ಬಿಜಿಎಸ್ ವರ್ಲ್ಡ್ ಸ್ಕೂಲ್ ನಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಕೃಷಿ ಸಚಿವ ಚೆಲುವರಾಯ ಸ್ವಾಮಿ, ಶಾಸಕ ರವಿ ಗಣಿಗ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್, ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಸೌಮ್ಯ ರೆಡ್ಡಿ, ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ರಾಜೀವ್ ಗೌಡ, ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ್, ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮುದ್ದ ಹನುಮೇಗೌಡ ಮತ್ತಿತರರು ಸ್ವಾಮೀಜಿ ಅವರನ್ನು ಭೇಟಿಮಾಡಿ ಆಶೀರ್ವಾದ ಕೋರಿದರು.
ಈ ಸಂದರ್ಭದಲ್ಲಿ ನಿರ್ಮಲಾನಂದ ಸ್ವಾಮೀಜಿ ಅವರು ಕಾಂಗ್ರೆಸ್ ಹುರಿಯಾಳುಗಳಿಗೆ ಗೆದ್ದು ಬರುವಂತೆ ಆಶೀರ್ವದಿಸಿದರು.ಹಿರಿಯ ಕಾಂಗ್ರೆಸ್ ಮುಖಂಡರು, ಪಕ್ಷದ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.