ಬೆಂಗಳೂರು: ಜನಸಂಖ್ಯೆಯು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಜನಸಂಖ್ಯೆ ನಿಯಂತ್ರಣದ ಕುರಿತು ನಾಗರೀಕರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ಅಭಿಪ್ರಾಯ ವ್ಯಕ್ತಪಡಿಸಿದರು.
ಬಿಬಿಎಂಪು ವತಿಯಿಂದ ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ನಗರದ ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ ಇಂದು ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಕುಟುಂಬ ಯೋಜನೆಯ ಕುರಿತು ನಾವು ನಾಗರೀಕರಿಗೆ ಅರಿವು ಮೂಡಿಸಬೇಕಿದೆ. ಜನಸಂಖ್ಯೆಯಲ್ಲಿ ವಿಶ್ವದಲ್ಲಿಯೇ ಚೀನಾ ಮೊದಲ ಸ್ಥಾನ, ಭಾರತ ಎರಡನೇ ಸ್ಥಾನದಲ್ಲಿದ್ದು, ನಾವೆಲ್ಲರೂ ಸೇರಿ ಜನಸಂಖ್ಯೆ ಏರಿಕೆಯನ್ನು ನಿಯಂತ್ರಿಸಬೇಕಿದೆ ಎಂದು ಹೇಳಿದರು.
ಹೆಚ್ಚು ಮಕ್ಕಳಿದ್ದರೆ ನಾವು ಮಕ್ಕಳಿಗೆ ಗುಣಮಟ್ಟದ ಜೀವನ ನೀಡಲು ಕಷ್ಟವಾಗುತ್ತದೆ. ಅದೇ ಒಬ್ಬರಿಬ್ಬರಿದ್ದರೆ ನಾವು ಅವರಿಗೆ ಉತ್ತಮ ಜೀವನವನ್ನು ರೂಪಿಸಿಕೊಡಬಹುದಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಪೋಷಕರು ಜನಸಂಖ್ಯಾ ನಿಯಂತ್ರಣಕ್ಕೆ ಕೈಜೋಡಿಸಬೇಕೆಂದು ಹೇಳಿದರು.
ವಿಜೇತರಿಗೆ ಬಹುಮಾನ ವಿತರಣೆ:
ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ಜನಸಂಖ್ಯೆ ನಿಯಂತ್ರಣ, ಕುಟುಂಬ ಯೋಜನೆಗಳು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಸಾಕ್ಷ್ಯಾ ಚಿತ್ರ, ರೀಲ್ಸ್, ಪೋಸ್ಟರ್ ಸಿದ್ದಪಡಿಸುವ ಕುರಿತು ಏರ್ಪಡಿಸಿದ್ದ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು, ನಾಗರೀಕರು ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿರುವ ಆಸ್ಪತ್ರೆಗಳ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಇದರಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.
ಈ ವೇಳೆ ಮುಖ್ಯ ಆರೋಗ್ಯಾಧಿಕಾರಿಗಳಾದ ಡಾ. ಸೈಯದ್ ಸಿರಾಜುದ್ದೀನ್ ಮದನಿ, ಡಾ. ನಿರ್ಮಲಾ ಬುಗ್ಗಿ, ಪ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾದ ಅಧ್ಯಕ್ಷರಾದ ಡಾ. ಪದ್ಮಿನಿ ಪ್ರಸಾದ್, ಗಾಯಕರಾದ ಶಶಿಧರ್ ಕೋಟೆ, ನಗೆ ಭಾಷಣಾಕಾರರಾದ ಸುಧಾ ಬರಗೂರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.