ಬೆಂಗಳೂರು: ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಸಂಬಂಧ ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ನಡೆದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವ ಸಂಬಂಧ ಆಯಾ ಇಲಾಖೆಗಳಿಗೆ ನೀಡಿರುವ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕೆಂದು ಸೂಚಿಸಿದರು.
ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಸನಗಳ ವ್ಯವಸ್ಥೆ, ಯಾವ ದ್ವಾರಗಳಲ್ಲಿ ಯಾರಿಗೆ ಪ್ರವೇಶ ನೀಡಬೇಕು, ಪಾರ್ಕಿಂಗ್ ವ್ಯವಸ್ಥೆ, ಮಾರ್ಗ ಬದಲಾವಣೆ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲದಂತೆ ನೋಡಿಕೊಳ್ಳಬೇಕೆಂದು ಸೂಚಿಸಲಾಯಿತು.
ಜಲಮಂಡಳಿ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮೈದಾನದಲ್ಲಿ ಶೌಚಾಲಯಗಳ ವ್ಯವಸ್ಥೆ, ಕಾರ್ಯಕ್ರಮದ ದಿನ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಹಾಗೂ ಭದ್ರತೆಯ ಹಿತದೃಷ್ಠಿಯಿಂದ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕೆಂದು ತಿಳಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರಿಯಾದ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ನಾಡಗೀತೆ, ರೈತ ಗೀತೆ ಹಾಡಲು ಸೂಕ್ತ ತಂಡವನ್ನು ಆಯ್ಕೆ ಮಾಡಬೇಕು. ಪ್ರಥಮ ಚಿಕಿತ್ಸೆ ವ್ಯಸವ್ಥೆಗಾಗಿ ಆಂಬುಲೆನ್ಸ್ ಜೊತೆಗೆ ಅಗತ್ಯ ಔಷಧಿ ಹಾಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಳ್ಳಬೇಕೆಂದು ಹೇಳಿದರು.
ಈ ವೇಳೆ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಡಾ. ಆರ್.ಎಲ್ ದೀಪಕ್, ಕರೀಗೌಡ, ಸ್ನೇಹಲ್, ವಿನೋತ್ ಪ್ರಿಯಾ, ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ದನಾಯಂದ್, ವಲಯ ಜಂಟಿ ಆಯುಕ್ತರು, ಬಿಬಿಎಂಪಿ, ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.