ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಮಧು ಬಂಗಾರಪ್ಪ ನವರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದೊಂದಿಗೆ ಇಂದು ಬೆಂಗಳೂರಿನ ಮಲ್ಲೇಶ್ವರದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕಚೇರಿಯಲ್ಲಿ ಸಭೆ ನಡೆಸಿದರು.
ಸಂಘದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ನುಗ್ಲಿ ಅವರ ನೇತೃತ್ವದಲ್ಲಿ ಹಲವು ಪ್ರತಿನಿಧಿಗಳು ಸಚಿವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಮಂಡಿಸಿದರು.
ಶಿಕ್ಷಕರ ಬೇಡಿಕೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಶಾಲಾ ಶಿಕ್ಷಣ ಇಲಾಖೆ ಸದಾ ಶಿಕ್ಷಕರ ಜೊತೆಗೆ ನಿಲ್ಲುವುದು ಎಂದು ಭರವಸೆ ನೀಡಿದರು. ಅಲ್ಲದೇ, ಈ ಬೇಡಿಕೆಗಳನ್ನು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತರುತ್ತೇವೆ ಎಂದು ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಸಕಾರಾತ್ಮಕ ನಿರ್ಧಾರದ ನಿರೀಕ್ಷೆಯಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಸಚಿವರು, ಶಿಕ್ಷಕರ ಸಂಘವನ್ನು ಮುಷ್ಕರಕ್ಕೆ ಹೋಗಬಾರದೆಂದು ತಿಳಿಸಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಶ್ಮಿ ಮಹೇಶ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಾದ ಡಾ. ಕೆ. ವಿ. ತ್ರಿಲೋಕ್ ಚಂದ್ರ ಉಪಸ್ಥಿತರಿದ್ದರು.