ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುವ ಪೌರಕಾರ್ಮಿಕರ ಮೇಲೆ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಲ್ಲೆ, ಜಾತಿ ನಿಂದನೆ ಮಾಡುತ್ತಿರುವುದು ಕಂಡುಬಂದಿರುತ್ತದೆ. ಜಾತಿಯ ಹೆಸರಿನಲ್ಲಿ ನಿಂದಿಸುವುದು, ಹಲ್ಲೆ ಮಾಡುವುದು ಕಾನೂನು ರೀತ್ಯಾ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಬಿಬಿಎಂಪಿ ಆರೋಗ್ಯ ವಲಯದ ಆಯುಕ್ತರಾದ ಸುರಳ್ಕರ್ ಪಾತ್ರಿಕಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಭಾರತದ ಸಂವಿಧಾನದ 17ನೇ ವಿಧಿಯು “ಅಸ್ಪೃಶ್ಯತೆ” ಯನ್ನು ನಿಷೇಧಿಸಿದೆ ಮತ್ತು ಯಾವುದೇ ರೂಪದಲ್ಲಿ ಅದರ ಆಚರಣೆಯು ಅಪರಾಧವಾಗಿದೆ. ನೈರ್ಮಲ್ಯ/ಸ್ವಚ್ಛತಾ ಕಾರ್ಮಿಕರನ್ನು ಗೌರವಿಸುವುದು ಕೇವಲ ನೈತಿಕ ಬಾಧ್ಯತೆಯಾಗಿರದೆ ಸಮಾಜದ ಅಗತ್ಯವೂ ಆಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಅವರು ನಿರ್ವಹಿಸುವ ಉದ್ಯೋಗಕ್ಕಿಂತ ವೈಯಕ್ತಿಕ ಘನತೆ ಮತ್ತು ಗೌರವಕ್ಕೆ ಅರ್ಹರಾಗಿರುತ್ತಾರೆ. ನೈರ್ಮಲ್ಯ ಕಾರ್ಮಿಕರ/ಪೌರಕಾರ್ಮಿಕರ ವಿರುದ್ಧ ತಾರತಮ್ಯವು ಮೂಲಭೂತ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ.
ಯಾವುದೇ ಸ್ಥಳದಲ್ಲಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಸದಸ್ಯರನ್ನು ಜಾತಿ ಹೆಸರಿನಿಂದ ನಿಂದಿಸುವುದು ಮತ್ತು ಉದ್ದೇಶಪೂರ್ವಕವಾಗಿ ಅವಮಾನಿಸುವುದು ಅಥವಾ ಬೆದರಿಕೆ ಹಾಕುವುದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ತಿದ್ದುಪಡಿ ಕಾಯಿದೆ 2015 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ.
ಈ ಹಿನ್ನೆಲೆಯಲ್ಲಿ, ಬಿಬಿಎಂಪಿಯಲ್ಲಿನ ಎಲ್ಲಾ ನಿವಾಸಿಗಳು ಮತ್ತು ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ ತಾವು ವಾಸಿಸುವ ಸ್ಥಳವನ್ನು/ಪರಿಸರವನ್ನು ದಿನನಿತ್ಯ ಸ್ವಚ್ಛಗೊಳಿಸುವ ಮೂಲಕ ಪೌರಕಾರ್ಮಿಕರು ತಮ್ಮ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಬಹು ಮಹತ್ತರ ಪಾತ್ರವಹಿಸಿದ್ದಾರೆ. ಪೌರಕಾರ್ಮಿಕರನ್ನು ಗೌರವದಿಂದ ಮತ್ತು ಘನತೆಯಿಂದ ನಡೆಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪೌರಕಾರ್ಮಿಕರನ್ನು ಅವರ ವೃತ್ತಿಯನ್ನು ಗೌರವಿಸಿ, ಅವರು ಸಮಾಜದಲ್ಲಿ ಘನತೆಯಿಂದ ಬದುಕಲು ಸಹಕರಿಸಲು, ಪೌರಕಾರ್ಮಿಕರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಲು ಆರೋಗ್ಯ ಮತ್ತು ನೈರ್ಮಲ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ಕೋರಿರುತ್ತಾರೆ.