ಬೆಂಗಳೂರು: ಬರ ಪರಿಸ್ಥಿತಿಯಲ್ಲಿ ನಾವೆಲ್ಲರೂ ನೀರನ್ನು ಬಹಳ ಜವಾಬ್ದಾರಿಯಿಂದ ಸಮರ್ಪಕವಾಗಿ ಬಳಸಬೇಕು. ಈ ವಿಚಾರವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ವಿಧಾನಸೌಧದ ಆವರಣದಲ್ಲಿ “ನೀರು ಉಳಿಸಿ ಬೆಂಗಳೂರು ಬೆಳಸಿ” ಅಭಿಯಾನಕ್ಕೆ ಚಾಲನೆ ಹಾಗೂ ಅಂತರ್ಜಲ, ಜಲಸಂರಕ್ಷಕ, ಜಲಮಿತ್ರ, ಜಲಸ್ನೇಹಿ ಆಪ್ ಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ಬೆಂಗಳೂರು ನಗರ ಈ ವರ್ಷ ಮಳೆ ಇಲ್ಲದೆ ತತ್ತರಿಸುತ್ತಿದೆ. ಬೆಂಗಳೂರಿನಲ್ಲಿ 6,900 ಕೊಳವೆ ಬಾವಿಗಳು ಬತ್ತಿದ್ದು, ಉಳಿದ 7 ಸಾವಿರ ಕೊಳವೆ ಬಾವಿಗಳು ಜೀವಂತವಾಗಿವೆ. ಹೀಗಾಗಿ ನೀರಿನ ಸಮರ್ಪಕ ಬಳಕೆ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಹೊಸ ಕೊಳವೆ ಬಾವಿ ಕೊರೆಯಲು ಅನುಮತಿ ನೀಡಬೇಕು. ಆ ಕೊಳವೆ ಬಾವಿಗಳ ನೀರನ್ನು ಸರಿಯಾಗಿ ನಿಯಂತ್ರಿಸಿ ಸದ್ಬಳಕೆ ಮಾಡುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ವಿವರಿಸಿದರು.
ಇಂದು ನಾಲ್ಕು ಆಪ್ ಗಳನ್ನು ಪರಿಚಯಿಸುತ್ತಿದ್ದು, ಯಾರೇ ಹೊಸ ಕೊಳವೆಬಾವಿ ಕೊರೆಯುವಾಗ ಬಿಡಬ್ಲ್ಯೂಎಸ್ಎಸ್ ಬಿಯಿಂದ ಅನುಮತಿ ಪಡೆಯಬೇಕಾಗಿದೆ. ಇದರಲ್ಲಿ ಹೆಚ್ಚುವರಿ ನೀರನ್ನು ಸರ್ಕಾರ ಯಾರಿಗೆ ಹಂಚಿಕೆ ಮಾಡಬೇಕು ಎಂದು ತೀರ್ಮಾನಿಸಲು ಹಾಗೂ ನೀರಿನ ಸಮರ್ಪಕ ಬಳಕೆಗೆ ಈ ಆಪ್ ತರಲಾಗಿದೆ ಎಂದರು.
ಕಳೆದ ಹತ್ತು ವರ್ಷಗಳಿಂದ ನೀರಿನ ದರವನ್ನ ಏರಿಕೆ ಮಾಡಿಲ್ಲ. ನಾನು ಈ ಇಲಾಖೆ ಜವಾಬ್ದಾರಿ ವಹಿಸಿಕೊಂಡ ದಿನದಿಂದಲೇ ಬಿಡಬ್ಲ್ಯೂಎಸ್ಎಸ್ ಬಿಗೆ ಶಕ್ತಿ ತುಂಬಲು ತೀರ್ಮಾನಿಸಿದ್ದೇನೆ ಎಂದು ಅವರು ಹೇಳಿದರು.
ನಾವು ಬೆಂಗಳೂರಿನ ಕುಡಿಯುವ ನೀರಿಗಾಗಿ ನಮ್ಮ ನೀರು ನಮ್ಮ ಹಕ್ಕು ಹೋರಾಟ ಮಾಡಿಕೊಂಡು ಬಂದಿದ್ದೇವೆ.
ನೀರನ್ನು ಉಳಿಸಿ, ಮುಂದಿನ ಪೀಳಿಗೆ ಕಣ್ಣೀರು ತಪ್ಪಿಸಲು ನಾವು ಶ್ರಮಿಸುತ್ತಿದ್ದೇವೆ. ನಾವು ಜಲ ರಕ್ಷಣೆಗಾಗಿ ಜನರಲ್ಲಿ ಅರಿವು ಮೂಡಿಸಬೇಕು. ಈ ಹಿನ್ನೆಲೆಯಲ್ಲಿ ನಮ್ಮ ಅಧಿಕಾರಿಗಳು ಹಗಲು ರಾತ್ರಿ ಬೆಂಗಳೂರಿನ ಖಾಸಗಿ ಟ್ಯಾಂಕರ್ ಗಳನ್ನು ನೋಂದಣಿ ಮಾಡಿಕೊಂಡಿದ್ದಾರೆ. ಸರ್ಕಾರದಿಂದ ರಿಯಾಯಿತಿ ದರ ನೀಗದಿ ಮಾಡಲಾಗಿದೆ. ಆಮೂಲಕ ನೀರಿನ ಪೂರೈಕೆ ಹೆಸರಲ್ಲಿ ನಡೆಯುತ್ತಿದ್ದ ದಂಧೆಗೆ ಕಡಿವಾಣ ಹಾಕಲಾಗಿದೆ ಎಂದು ಅವರು ಹೇಳಿದರು.
ನಾವು ನೀರಿನ ಅಭಾವ ಸ್ಥಿತಿಯನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿದ್ದೇವೆ. ಚುನಾವಣೆ ಇದೆ ಎಂಬ ಕಾರಣಕ್ಕೆ ನೀರಿನ ಸಮಸ್ಯೆ ಬಗ್ಗೆ ಹೆಚ್ಚಿನ ಪ್ರಚಾರ ಹಾಗೂ ರಾಜಕೀಯ ಮಾಡಲಾಗುತ್ತಿದೆ. ನಾವು ಆ ಬಗ್ಗೆ ತಲೆಕೆಡಿಸಿಕೊಳ್ಳದೇ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಚುನಾವಣೆ ನೀತಿ ಸಂಹಿತೆ ಏನೇ ಬರಲಿ, ಕುಡಿಯುವ ನೀರಿನ ವಿಚಾರದಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಿ. ಎಲ್ಲೆಲ್ಲಿ ನೀರಿನ ಅಭಾವವಿದೆ ಅಲ್ಲಿ ನೀರನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.
ಈ ಪರಿಸ್ಥಿತಿಯಲ್ಲಿ ನೀರಿನ ಸಮರ್ಪಕ ಬಳಕೆಗೆ ಎಲ್ಲರೂ ಎಚ್ಚರಿಕೆಯಿಂದ ಜವಾಬ್ದಾರಿ ನಿಭಾಯಿಸಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ನಗರದಲ್ಲಿನ ಪ್ರಸ್ತುತ ನೀರಿನ ಸಮಸ್ಯೆಯ ಬಗ್ಗೆ ವಿವರಿಸಿದರು.
ಮಂಡಳಿಯೊದಿಗೆ ಸಾರ್ವಜನಿಕರು ಸಹ ಕೈಜೋಡಿಸಿದ್ದಲ್ಲಿ ಮಾತ್ರ ನಗರದ ನೀರಿನ ಬವಣೆಯನ್ನು ನೀಗಿಸಲು ಸಾಧ್ಯವೆಂದು ತಿಳಿಸಿದ ಅವರು ಮುಖ್ಯಮಂತ್ರಿಗಳ ಮಾರ್ಗದರ್ಶನ ಮತ್ತು ಉಪ ಮುಖ್ಯಮಂತ್ರಿಗಳ ನಿರ್ದೇಶನದಂತೆ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಸಿದ್ಧಪಡಿಸಲಾದ 4 ವೆಬ್ ಅಪ್ಲಿಕೇಷನ್ಗಳಲ್ಲಿ ಮೊದಲನೆಯದಾದ ಪರಿಸರ ಜಲಸ್ನೇಹಿ ಆ್ಯಪ್ ನಲ್ಲಿ ಸಂಸ್ಕರಿಸಿದ ನೀರನ್ನು ಸಾರ್ವಜನಿಕರು ಕುಡಿಯುವುದಕ್ಕೆ ಹೊರತು ಪಡೆಸಿ ಇನ್ನಿತರೆ ಕಾರ್ಯಗಳಿಗೆ ಉಪಯೋಗಿಸಲು ಬಳಸಬಹುದಾಗಿರುತ್ತದೆ, ಜಲ ಸಂರಕ್ಷಕ ಆ್ಯಪ್ ನಲ್ಲಿ ಮಂಡಳಿಯು ನಿಷೇಧ ಮಾಡಿರುವ ಸ್ಥಳಗಳಲ್ಲಿ ಕುಡಿಯುವ ನೀರನ್ನು ಬಳಸುವುದನ್ನು ಉಲ್ಲಂಘನೆ ಮಾಡಿದವರಿಗೆ ಸ್ಥಳದಲ್ಲೇ ದಂಡ ವಿಧಿಸುವುದು, ಅಂತರ್ಜಲ ಆ್ಯಪ್ ನಲ್ಲಿ ನಗರದ ನಾಗರೀಕರು ಮನಯಲ್ಲಿಯೇ ಕುಳಿತು ಕೊಳವೆ ಭಾವಿಯ ಅನುಮತಿ ಪಡೆಯಲು ಅರ್ಜಿ ಸಲ್ಲಿಸಿ ನಿರಾಕ್ಷೇಪಣಾ ಪತ್ರವನ್ನು ಪಡೆಯಬಹುದು ಹಾಗೂ ಜಲಮಿತ್ರ ಆ್ಯಪ್ ನಲ್ಲಿ ನಗರದ ವ್ಯಾಪ್ತಿಯಲ್ಲಿನ ನೀರು ಸೋರಿಕೆ, ಒಳಚರಂಡಿ ಸಮಸ್ಯೆ, ಮಂಡಳಿಯ ದಾಖಲಾತಿ ಸರ್ವೆ ಮಾಡಲು ಮತ್ತು ಇನ್ನಿತರೆ ಮಂಡಳಿಯ ಕಾರ್ಯಗಳಿಗೆ ಸ್ವಯಂ ಸೇವೆ ಸಲ್ಲಿಸಲು ಇಚ್ಚಿಸುವ ನಾಗರೀಕರು, ಎನ್.ಜಿ.ಓ ಗಳು, ನಿವೃತ್ತ ತಾಂತ್ರಿಕ ಸಿಬ್ಬಂದಿಗಳು ಈ ಆ್ಯಪ್ ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿರುತ್ತದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಅಶೋಕ್ ಮನಗೂಳಿ, ಬಸವರಾಜ್ ಶಿವಗಂಗಾ, ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್, ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರರಾವ್, ಬೆಂಗಳೂರು ಜಲಮಂಡಳಿಯ ಎಂಜನಿಯರ್ಗಳು ಹಾಗೂ ಅಧಿಕಾರಿಗಳು ಸೇರಿದಂತೆ ಇನ್ನೀತರರು ಇದ್ದರು.