ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ನಮೂನೆಗಳನ್ನು ಸಲ್ಲಿಸಲು, ತಿದ್ದುಪಡಿ ಮಾಡುವ ಅವಧಿಯನ್ನು 12 ಜನವರಿ 2024ರವರೆಗೆ ವಿಸ್ತರಿಸಿದ್ದು, ಈ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೆಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಕುರಿತು ರಾಜಕೀಯ ಪ್ರತಿನಿಧಿಗಳ ಜೊತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅದರಂತೆ ದತ್ತಾಂಶಗಳ ಕ್ರೂಡೀಕರಣ, ನವೀಕರಣ ಹಾಗೂ ಮುದ್ರಣ ಕಾರ್ಯ ಜನವರಿ 17 ನಿಗಧಿಪಡಿಸಿದೆ. ಅಂತಿಮ ಮತದಾರರಪಟ್ಟಿಯನ್ನು ಜ. 22 ರಂದು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆಗೆ ಅವಧಿ ವಿಸ್ತರಿಸಿರುವ ಬಗ್ಗೆ ಪಾಲಿಕೆಯ ಎಲ್ಲಾ ಕಂದಾಯ ಇಲಾಖೆಯ ಕಛೇರಿಗಳಲ್ಲಿ ಬ್ಯಾನರ್ ಗಳನ್ನು ಹಾಕಿ ನಾಗರಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಜೊತೆಗೆ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದಿರುವವರನ್ನು ಸೇರ್ಪಡೆ ಮಾಡುವ ಕೆಲಸ ಮಾಡು ಕುರಿತು ಜಾಗೃತಿ ಮೂಡಿಸಬೇಕೆಂದು ಸೂಚನೆ ನೀಡಿದರು.
ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಇನ್ನೂ ಸೇರ್ಪಡೆಯಾಗುವ ಅವಕಾಶವಿದ್ದು, ಹೆಚ್ಚಿನ ಪ್ರಮಾಣದಲ್ಲಿ ಸೇರ್ಪಡೆ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.
ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್, ಬೆಂಗಳೂರು ಕೇಂದ್ರ/ದಕ್ಷಿಣ/ಉತ್ತರ/ನಗರದ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.