2028ರ ಚುನಾವಣೆಗೆ ಸ್ಪರ್ಧಿಸಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ..!!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. 2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಎಕ್ಸ್ (X) ಖಾತೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿದ್ದು, ಮುಂದಿನ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಆದರೆ ಸಕ್ರಿಯ ರಾಜಕಾರಣದಲ್ಲೇ ಮುಂದುವರಿದು ಜನರ ಕಷ್ಟ-ಸುಖಗಳಿಗೆ ಧ್ವನಿಯಾಗುತ್ತೇನೆ ಎಂದಿದ್ದಾರೆ.
ವರುಣ ಕ್ಷೇತ್ರದ ಜನರು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸಿದರೂ, ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ನಿರ್ಧಾರವನ್ನು ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

"ಒಂದು ಕಾಲದಲ್ಲಿ ಕ್ಷೇತ್ರದ ಜನರೇ ಹಣ ಸಂಗ್ರಹಿಸಿ ನನ್ನನ್ನು ಗೆಲ್ಲಿಸುತ್ತಿದ್ದರು. ಆದರೆ ಇಂದು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅಭ್ಯರ್ಥಿಗಳೇ ಜನರಿಗೆ ದುಡ್ಡು ಕೊಡಬೇಕಾದ ಪರಿಸ್ಥಿತಿ ಬಂದಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲವಿಲ್ಲದಂತಾಗಿದೆ" ಎಂದು ಸಿದ್ದರಾಮಯ್ಯ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.
ಮಾಜಿ ಸಿಎಂ ಅವರ ಈ ಘೋಷಣೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ರಾಜಕೀಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.