ಸೊರಬ : ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ, ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಉದ್ಘಾಟಿಸಿದರು.
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ತಲವಾಟ ಗ್ರಾಮ ಪಂಚಾಯತ್ ಸಹಯೋಗದಲ್ಲಿ ನಿರ್ಮಿಸಿರುವ ವಸತಿ ಶಾಲೆಯ ಹೆಚ್ಚುವರಿ ಕಟ್ಟಡವನ್ನು ಉದ್ಘಾಟಿಸಿದ ಸಚಿವರು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದರು.
ನಂತರ ಗೌತಮಪುರ ಮತ್ತು ಹೊಸಬಾಳೆ ಗ್ರಾಮಗಳನ್ನು ಸಂಪರ್ಕಿಸುವ ಹೊಂಕೇರಿ ಗ್ರಾಮದ ಸಮೀಪ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿಯನ್ನು ಸಚಿವರು ಪರಿಶೀಲಿಸಿದರು. ಅಂದಾಜು ₹1.40 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗುತ್ತಿದ್ದು, ಸ್ಥಳೀಯ ಜನರ ಸಂಚಾರಕ್ಕೆ ಅನುಕೂಲವಾಗಲಿದೆ.
ತಾಳಗುಪ್ಪ ಹೋಬಳಿಯ ತಲವಾಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಜಿನಕಾನು ಗ್ರಾಮದಿಂದ ಹಿರೇಮನಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕಾಮಗಾರಿಗೆ ಸಚಿವರು ಭೂಮಿಪೂಜೆ ನೆರವೇರಿಸಿದರು. ₹25 ಲಕ್ಷ ಅಂದಾಜು ವೆಚ್ಚದಲ್ಲಿ ಈ ರಸ್ತೆ ನಿರ್ಮಾಣವಾಗಲಿದೆ.
ಬುಡಕಟ್ಟು ಸಮುದಾಯಗಳ ಪೌಷ್ಟಿಕತೆಗೆ ಸರ್ಕಾರದ ವಿಶೇಷ ಕಾಳಜಿ
ಅರಣ್ಯದಂಚಿನಲ್ಲಿ ವಾಸಿಸುವ ಪರಿಶಿಷ್ಟ ಪಂಗಡದ ಹಸಲರು ಮತ್ತು ಗೊಂಡ ಸಮುದಾಯಗಳ ಆರೋಗ್ಯ ಹಾಗೂ ಪೌಷ್ಟಿಕಾಂಶದ ಕೊರತೆ ನಿವಾರಿಸುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಪೌಷ್ಟಿಕ ಆಹಾರ ವಿತರಣಾ ಯೋಜನೆಯಡಿ ಫಲಾನುಭವಿಗಳಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.
2018ರಲ್ಲಿ ಆರಂಭವಾದ ಈ ಯೋಜನೆಯಡಿ ಆರಂಭದಲ್ಲಿ ಮಳೆಗಾಲದ ಆರು ತಿಂಗಳ ಅವಧಿಗೆ ಮಾತ್ರ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ವಿತರಿಸಲಾಗುತ್ತಿತ್ತು. ಬುಡಕಟ್ಟು ಸಮುದಾಯಗಳ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ 2024-25ನೇ ಸಾಲಿನಿಂದ ಯೋಜನೆಯನ್ನು ವಿಸ್ತರಿಸಿ ವರ್ಷದ ಎಲ್ಲಾ 12 ತಿಂಗಳುಗಳಲ್ಲಿಯೂ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ವಿತರಿಸುತ್ತಿದೆ.
ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳ ಪೌಷ್ಟಿಕಾಂಶದ ಕೊರತೆ ನಿವಾರಣೆ, ಉತ್ತಮ ಆರೋಗ್ಯ, ಜೀವನಮಟ್ಟ ಸುಧಾರಣೆ ಹಾಗೂ ಆರೋಗ್ಯವಂತ ಕುಟುಂಬಗಳ ನಿರ್ಮಾಣ ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಅನುಷ್ಠಾನಗೊಳ್ಳುತ್ತಿರುವ ಈ ಯೋಜನೆ ಬುಡಕಟ್ಟು ಜನರ ಆರೋಗ್ಯ ಸಂರಕ್ಷಣೆಗೆ ಪೂರಕವಾಗಿದೆ.
ಸಾಧಕ ವಿದ್ಯಾರ್ಥಿಗಳಿಗೆ ಸಚಿವರಿಂದ ಸನ್ಮಾನ
ಇದೇ ಸಂದರ್ಭದಲ್ಲಿ ಹಿರೇಮನಿ ಗ್ರಾಮದ ಹಿರಿಯರಾದ ಸಾವಿತ್ರಮ್ಮ ಹಾಗೂ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ವಿದ್ಯಾರ್ಥಿನಿ ದೀಪಿಕಾ ಅವರ ಉನ್ನತ ವ್ಯಾಸಂಗದ ಸಾಧನೆಯನ್ನು ಮೆಚ್ಚಿ ಸಚಿವರು ಸನ್ಮಾನಿಸಿದರು.
ವಸತಿ ಶಾಲೆಯ ವಿದ್ಯಾರ್ಥಿಗಳು ಸಾಮೂಹಿಕವಾಗಿ ನಾಡಗೀತೆ ಹಾಡಿ ಸಚಿವರ ಮೆಚ್ಚುಗೆಗೆ ಪಾತ್ರರಾದರು. ನಾಡಗೀತೆಯನ್ನು ರಚಿಸಿದ ಕವಿ ಯಾರು ಎಂದು ಸಚಿವರು ಪ್ರಶ್ನಿಸಿದಾಗ ಸರಿಯಾದ ಉತ್ತರ ನೀಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ತಮಗೆ ಸನ್ಮಾನಿಸಲು ತಂದಿದ್ದ ಹಣ್ಣಿನ ಬುಟ್ಟಿಯನ್ನೇ ವಿದ್ಯಾರ್ಥಿಗಳಿಗೆ ನೀಡಿ ಪ್ರೋತ್ಸಾಹಿಸಿದರು.
17 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿ
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ರಾಜ್ಯದಲ್ಲಿ ಸುಮಾರು 17 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಇದು ರಾಜ್ಯದ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ಪ್ರಮಾಣದ ಶಿಕ್ಷಕರ ನೇಮಕಾತಿಯಾಗಲಿದೆ. ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಶಿಕ್ಷಣ ಪ್ರತಿಯೊಬ್ಬರಿಗೂ ಉಚಿತವಾಗಿ ದೊರೆಯಬೇಕು. ಗ್ರಾಮೀಣ ಮತ್ತು ಬುಡಕಟ್ಟು ಪ್ರದೇಶಗಳ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಲಭ್ಯವಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಮಕ್ಕಳ ಶಿಕ್ಷಣಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲು ನಾನು ಸಿದ್ಧನಿದ್ದೇನೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಗಣಪತಿ ಎಚ್. ಹುಲ್ತಿಕೊಪ್ಪ, ಬುಡಕಟ್ಟು ಸಮಾಜದ ಹಿರಿಯ ನಾಯಕಿ ಲಕ್ಷಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮೂರ್ತಿ, ಬಗರ್ ಹುಕ್ಕುಂ ಸಮಿತಿ ಅಧ್ಯಕ್ಷ ಹುಚ್ಚಪ್ಪ ಮಂಡಗಳಲೆ, ಕಾಂಗ್ರೆಸ್ ಮುಖಂಡರಾದ ಲೋಕೇಶ್ ಗಾಳಿಪುರ, ಕಣ್ಣಪ್ಪ ಮಂಜಿನಕಾನೆ, ಅಶೋಕ್ ಬರದವಳ್ಳಿ, ಅನಿಲ್ ಗೌಡರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.