ಚನ್ನರಾಯಪಟ್ಟಣ: ಕಂದಾಯ ಇಲಾಖೆಗೆ ಸಂಬಂಧಪಟ್ಟ ಸಮಸ್ಯೆಗಳು ಹೆಚ್ಚಾಗಿ ದಾಖಲಾಗಿರುವ ಹಿನ್ನೆಲೆಯಲ್ಲಿ, ಅವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಸಕಲೇಶಪುರದ ಮಾದರಿಯಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಉಪಸಮಿತಿಯನ್ನು ರಚನೆ ಮಾಡಲಾಗುವುದು ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಹೇಳಿದರು.
ಚನ್ನರಾಯಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ಇಂದು ಇಡೀ ದಿನ ತಾಲ್ಲೂಕು ಮಟ್ಟದ ‘ಪ್ರಜಾ ಸೇವಾ ಆಂದೋಲನ’ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಈ ಸಭೆಯಲ್ಲಿ ದಾಖಲಾದ ಒಟ್ಟು ಅರ್ಜಿಗಳಲ್ಲಿ ಶೇ. 90ರಷ್ಟು ಅರ್ಜಿಗಳು ಕಂದಾಯ ಇಲಾಖೆ ಹಾಗೂ ಸರ್ವೆ (ಡಿಎಲ್‌ಆರ್) ವಿಭಾಗಕ್ಕೆ ಸಂಬಂಧಿಸಿವೆ. ಉಳಿದ ಶೇ. 10ರಷ್ಟು ಅರ್ಜಿಗಳು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ (ಇ.ಓ.) ವ್ಯಾಪ್ತಿಗೆ ಹಾಗೂ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿವೆ.
ಸಭೆಯಲ್ಲಿ ಸ್ವೀಕರಿಸಲಾದ ಪ್ರತಿಯೊಂದು ಅರ್ಜಿಯ ಮಾಹಿತಿಯೂ ಶಾಸಕರು ಹಾಗೂ ಸಚಿವರಿಗೆ ತಲುಪಲಿದ್ದು, ಯಾವ ಇಲಾಖೆಯಿಂದ ಎಷ್ಟು ಅರ್ಜಿಗಳು ಬಂದಿವೆ ಮತ್ತು ಕೈಗೊಂಡ ಕ್ರಮಗಳೇನು ಎಂಬುದನ್ನು ಸಚಿವ ಸಂಪುಟ ಸಭೆಯಲ್ಲಿಯೂ ಪರಿಶೀಲಿಸಲಾಗುತ್ತದೆ. ಮುಖ್ಯಮಂತ್ರಿಗಳು ಸಹ ಸಭೆಗಳ ಪ್ರಗತಿಯನ್ನು ನೇರವಾಗಿ ಗಮನಿಸುತ್ತಿದ್ದು, ಇದಕ್ಕಾಗಿ ಪ್ರಧಾನ ಕಾರ್ಯದರ್ಶಿ ಮಟ್ಟದ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ತಿಳಿಸಿದರು.
ಪ್ರಜಾ ಸೇವಾ ಆಂದೋಲನವು ಒಂದು ಸಂವಿಧಾನಾತ್ಮಕ ಕಾರ್ಯಕ್ರಮವಾಗಿದ್ದು, ಕೇವಲ ಘೋಷಣೆಗೆ ಸೀಮಿತವಾಗದೆ ಜನಸಾಮಾನ್ಯರ ಸಮಸ್ಯೆಗಳಿಗೆ ನೈಜ ಪರಿಹಾರ ಒದಗಿಸುವ ವೇದಿಕೆಯಾಗಿದೆ. ಹಲವು ವರ್ಷಗಳಿಂದ ಭೂ ದಾಖಲಾತಿಗಳು ಸಿಗದೆ ಪರದಾಡುತ್ತಿರುವ ಜನಸಾಮಾನ್ಯರ ಸಮಸ್ಯೆಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ, ಸೂಕ್ತ ಮಾರ್ಗದರ್ಶನದೊಂದಿಗೆ ತ್ವರಿತವಾಗಿ ಇತ್ಯರ್ಥಪಡಿಸಿಕೊಡುವುದು ಆಡಳಿತದ ಕರ್ತವ್ಯವಾಗಿದೆ. ಅರ್ಜಿಗಳನ್ನು ಸ್ವೀಕರಿಸಿ ಬದಿಗಿಡುವ ಅಥವಾ ನಾಟಕೀಯವಾಗಿ ಜನರನ್ನು ಕಳುಹಿಸುವ ಪ್ರವೃತ್ತಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಜನರು ಸರ್ಕಾರದ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮುಂದಿನ ದಿನಗಳಲ್ಲಿ ತಾಲ್ಲೂಕು ಕಚೇರಿಗಳಿಗೆ ಭೇಟಿ ನೀಡಿ, ಪ್ರಜಾ ಸೇವಾ ಆಂದೋಲನದಲ್ಲಿ ಸ್ವೀಕರಿಸಲಾದ ಅರ್ಜಿಗಳ ವಿಲೇವಾರಿ ಮತ್ತು ಸಾರ್ವಜನಿಕರಿಗೆ ಸಿಕ್ಕಿರುವ ನ್ಯಾಯದ ಕುರಿತು ಖುದ್ದು ಪ್ರಗತಿ ಪರಿಶೀಲನೆ ನಡೆಸುತ್ತೇನೆ. ತಾಲ್ಲೂಕು ಪಂಚಾಯಿತಿ ಇ.ಓ. ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳತ್ತ ಗಂಭೀರ ಗಮನ ಹರಿಸಿ ಕರ್ತವ್ಯ ನಿರ್ವಹಿಸಬೇಕು. ನಿರ್ಲಕ್ಷ್ಯ ಅಥವಾ ಅಸಡ್ಡೆ ತೋರಿದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. 
ಈ ಸಂದರ್ಭದಲ್ಲಿ ಶಾಸಕರಾದ ಸಿ. ಎನ್. ಬಾಲಕೃಷ್ಣ, ಜಿಲ್ಲಾಧಿಕಾರಿಗಳಾದ ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತ ಸೇರಿದಂತೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.