ನವದೆಹಲಿ (ಜಂತರ್ ಮಂತರ್); ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ರಾಜ್ಯ ಸರ್ಕಾರ ಇಂದು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಆರ್. ಸೀತಾರಾಂ, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್.ರಕ್ಷಾ ರಾಮಯ್ಯ ಭಾಗವಹಿಸಿದ್ದರು.
ಪ್ರತಿಭಟನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಎಸ್. ರಕ್ಷಾ ರಾಮಯ್ಯ, ಕೇಂದ್ರದಿಂದ ರಾಜ್ಯಕ್ಕೆ ವ್ಯಾಪಕ ಅನ್ಯಾಯವಾಗುತ್ತಿದೆ. ಎರಡನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ಕರ್ನಾಟಕವಾಗಿದ್ದು, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತೆರಿಗೆ ಪಾಲು ಗಣನೀಯವಾಗಿ ಕಡಿತವಾಗಿದೆ. ಕೇಂದ್ರದಿಂದ ನಮಗೇ ನಿರಂತರವಾಗಿ ಅನ್ಯಾಯವಾಗುತ್ತಿದ್ದು, ಇಂತಹ ತಾರತಮ್ಯ ನೀತಿ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಾತ್ಮಾ ಗಾಂಧೀಜಿ ನೇತೃತ್ವದಲ್ಲಿ ನಡೆದ ಉಪ್ಪಿನ ಸತ್ಯಾಗ್ರಹ ಮಾದರಿಯಲ್ಲಿ ನಮ್ಮ ಹೋರಾಟ ತೀವ್ರಗೊಳಿಸುತ್ತೇವೆ. ನಮಗೆ ನ್ಯಾಯ ಸಿಗುವವರೆಗೆ ನಾವು ವಿರಮಿಸುವುದಿಲ್ಲ. ಕರ್ನಾಟಕದಿಂದ ಸಿಗುವ ಶೇ 100 ರಷ್ಟು ತೆರಿಗೆಯಲ್ಲಿ ನಮಗೆ ಕೇವಲ ಶೇ 12 ರಿಂದ 13 ರಷ್ಟು ಮಾತ್ರ ಪಾಲು ದೊರೆಯುತ್ತಿದೆ. ಇಂತಹ ಅನ್ಯಾಯ ಹಿಂದೆಂದೂ ಆಗಿರಲ್ಲ. ಮುಖ್ಯಮಂತ್ರಿಯೊಬ್ಬರು ದೆಹಲಿಗೆ ಬಂದು ಪ್ರತಿಭಟನೆ ಮಾಡುತ್ತಿದ್ದರೂ ಸಹ ಅವರ ಅಹವಾಲು ಆಲಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿಲ್ಲ ಎಂದು ಎಂ.ಎಸ್. ರಕ್ಷಾ ರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.