ಬೆಂಗಳೂರು; ರಾಜ್ಯದ ಉತ್ತರ ಭಾಗದಲ್ಲಿ ಮೇ 7 ರಂದು ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆವಾರು ಚುನಾವಣೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.
ಶಾಸಕರು, ಮಾಜಿ ಶಾಸಕರು, ಮೊದಲ ಹಂತದ ಲೋಕಸಭಾ ಚುನಾವಣೆ ಪೂರ್ಣಗೊಂಡಿರುವ ಅಭ್ಯರ್ಥಿಗಳು ಒಳಗೊಂಡಂತೆ 48 ಮಂದಿ ಧುರೀಣರಿಗೆ ಮಹತ್ವದ ಜವಾಬ್ದಾರಿ ವಹಿಸಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿದ ರಕ್ಷಾ ರಾಮಯ್ಯ ಅವರಿಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಲೋಕಸಭೆ ಕ್ಷೇತ್ರದ ಉಸ್ತುವಾರಿ ನೀಡಲಾಗಿದ್ದು, ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ರಕ್ಷಾ ರಾಮಯ್ಯ,ತಮ್ಮ ಸಂಘಟನೆ ಮತ್ತು ಕಾರ್ಯವೈಖರಿ ಗುರುತಿಸಿ, 2ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ತಮಗೆ ಅವಕಾಶ ದೊರೆತಿದೆ. ಸೇವೆ ಮಾಡಲು ಅವಕಾಶ ಮಾಡಿಕೊಟ್ಟ ರಾಜ್ಯ ಮತ್ತು ರಾಷ್ಟ್ರೀಯ ನಾಯಕರಿಗೆ ಧನ್ಯವಾದಗಳು. ನನ್ನ ಶಕ್ತಿ ಮೀರಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮವಹಿಸುತ್ತೇನೆ ಎಂದು ಹೇಳಿದ್ದಾರೆ.