ಬೆಂಗಳೂರು: 2024ನೇ ಸಾಲಿನ ರಾಜ್ಯ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿದ್ದು, ಅದಕ್ಕೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
2024ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಯ ಸಂಬಂಧ ಇಂದು ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗಣರಾಜ್ಯೋತ್ಸವ ದಿನಾಚರಣೆಯ ದಿನ ಆವರಣಕ್ಕೆ ಬರುವ ಅತೀ ಗಣ್ಯರು, ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಯಾವ ದ್ವಾರದಲ್ಲಿ ಬರಬೇಕು ಹಾಗೂ ವಾಹನಗಳ ಪಾರ್ಕಿಂಗ್ ಸ್ಥಳ ವಿಚಾರವಾಗಿ ಯಾವುದೇ ಲೋಪಗಳಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.
ಪ್ರತಿ ವರ್ಷದಂತೆ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕವಾಯತು ಪ್ರದರ್ಶನಕ್ಕಾಗಿ ಅಗತ್ಯ ಏರ್ಪಾಡುಗಳನ್ನು ಮಾಡಿಕೊಂಡು ಪೋಲೀಸ್ ಇಲಾಖೆಯಿಂದ ಶಿಷ್ಟಾಚಾರದನ್ವಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಸೂಚನೆ ನೀಡಿದರು.
ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯುವ ವೇಳೆ ಮೈದಾನದಲ್ಲಿ ಧೂಳು ಏಳುವ ಸಾಧ್ಯತೆಯಿದ್ದು, ಮೈದಾನಕ್ಕೆ ನೀರನ್ನು ನಿಯಮಿತವಾಗಿ ಸಿಂಪಡಿಸಿ ಮಣ್ಣಿನ ಧೂಳು ಏಳದಂತೆ ಅಗತ್ಯ ಕ್ರಮ ವಹಿಸಲು ಸೂಚಿಸಲಾಯಿತು.
ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಕೆ.ಎ.ದಯಾನಂದ್, ವಲಯ ಆಯುಕ್ತರಾದ ಸ್ನೇಹಲ್, ಉಪ ಆಯುಕ್ತರಾದ ಮಂಜುನಾಥಸ್ವಾಮಿ, ಪೊಲೀಸ್ ಅಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.