ಬೆಂಗಳೂರು:ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈ ವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ ಎಂದು ಸಿ.ಡಬ್ಲ್ಯೂ.ಆರ್.ಸಿ ಗೆ ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಮಳೆ ಬರುವ ಮುನ್ಸೂಚನೆ ಇದ್ದರೂ ಸಹ ಇಲ್ಲಿಯವರೆಗೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಆಗಿರುವುದಿಲ್ಲ, ಹೀಗಾಗಿ ಕರ್ನಾಟಕದಲ್ಲಿರುವ ಎಲ್ಲಾ ಜಲಾಶಯಗಳು ಖಾಲಿಯಾಗಿವೆ,
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಜುಲೈ ಅಂತ್ಯದ ವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ ಸಿ.ಡಬ್ಲ್ಯೂ.ಆರ್.ಸಿ ಅವರು ಜುಲೈ 12 ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ.
ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಗಿದೆ. ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ.
ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನಿಸಲಾಗುವುದು.